;

ಪರಿಶಿಷ್ಟ ಜಾತಿ, ಪಂಗಡದವರ ಸೌಲಭ್ಯಗಳನ್ನು ಶೀಘ್ರ ತಲುಪಿಸಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್…!!!

ಪರಿಶಿಷ್ಟ ಜಾತಿ, ಪಂಗಡದವರ ಸೌಲಭ್ಯಗಳನ್ನು ಶೀಘ್ರ ತಲುಪಿಸಿ: ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆ,  ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸರ್ಕಾರ ಜಾರಿಗೆ ತಂದಿರುವ ಸೌಲಭ್ಯಗಳನ್ನು ತಲುಪಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಶೀಘ್ರ ಕ್ರಮ ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ತಿಳಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ 1ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದ 24 ಗಂಟೆಗಳಲ್ಲಿ ಪ್ರಕರಣ ದಾಖಲು ಮಾಡುವುದೊಂದಿಗೆ, ಪ್ರಕರಣ ನಡೆದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಕ್ರಮ ಕೈಗೊಂಡು ಪರಿಹಾರ ಒದಗಿಸುವ ಮೂಲಕ ಶೀಘ್ರವಾಗಿ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವೊಂದು ಗ್ರಾಮಗಳನ್ನು ಹೊರತುಪಡಿಸಿ ಎಲ್ಲಾ ಗ್ರಾಮಗಳಿಗೆ ಸ್ಮಶಾನಕ್ಕಾಗಿ ಭೂಮಿ ಜಾಗ ಮಂಜೂರು ಮಾಡಲಾಗಿದೆ. ಶೀಘ್ರವಾಗಿ ಇನ್ನುಳಿದ ಗ್ರಾಮಗಳಿಗೂ ಶೀಘ್ರವಾಗಿ ಸ್ಮಶಾನ ಭೂಮಿ ಜಾಗ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಸಂಘಟನೆಗಳ ಹೋರಾಟಗಾರರನ್ನು ರೌಡಿಶೀಟರ್ ಪಟ್ಟಿ‌ಗೆ ಸೇರಿಸಲಾಗಿದ್ದು, ಸನ್ನಡತೆ ಆಧಾರದಲ್ಲಿರುವವರ ಹೆಸರುಗಳನ್ನು ಪುನರ್ ಪರಿಶೀಲನೆ ನಡೆಸಿ ರೌಡಿಶೀಟರ್‌ ಪಟ್ಟಿಯಿಂದ ಕೈಬಿಡಬೇಕೆಂದು ಜಿಲ್ಲಾ ಜಾಗೃತಿ ಸಮಿತಿ ಸದಸ್ಯರುಗಳು ಒತ್ತಾಯಿಸಿದಾಗ ಈ ಕುರಿತು ಪರಿಶೀಲಿಸಿ ಶೀಘ್ರ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿಯವರು ಪೋಲಿಸ್ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರ ಜಮೀನುಗಳಿಗೆ ರಸ್ತೆ ಹಾಗೂ ಕಾಲೋನಿಗಳ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದರಲ್ಲದೆ ಮನೆಗಳನ್ನು ಕಳೆದುಕೊಂಡಿರುವವರಿಗೆ ವಿವಿಧ ವಸತಿ ಯೋಜನೆಗಳಡಿ ಮನೆ ಅಥವಾ ಹಕ್ಕುಪತ್ರ ವಿತರಣೆಗೆ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಗಂಗಾ ಕಲ್ಯಾಣ ಯೋಜನೆಯಡಿ ಕೊರೆದಿರುವ ಕೊಳವೆಬಾವಿಗಳಿಗೆ ಪಂಪು ಮೋಟಾರ್ ಹಾಗೂ ಇತರೆ ಸಾಮಗ್ರಿಗಳನ್ನು ಸ್ಥಳೀಯ ಶಾಸಕರಿಂದ ವಿತರಿಸಲು ಕ್ರಮವಹಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗೆ ನಿರ್ದೇಶಿಸಿದರು.
ವಿವಿಧ ಯೋಜನೆಗಳಡಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ನೀಡಲಾಗುವ ಸಾಲ, ಸಹಾಯಧನಕ್ಕೆ ಸಂಬಂಧಿಸಿದ ಅರ್ಜಿಗಳು ಬ್ಯಾಂಕುಗಳಲ್ಲಿ ವಿಲೇವಾರಿಯಾಗದೇ ಉಳಿದಿದ್ದು ಈ ಕುರಿತು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‌ಗಳ ಸಮೀಕ್ಷೆ ನಡೆಸಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಅವರಿಗೆ ಜಿಲ್ಲಾಧಿಕಾರಿಯವರು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ ಅವರು ದೌರ್ಜನ್ಯ ಪ್ರಕರಣಗಳ ದಾಖಲು ಮತ್ತು ಪರಿಹಾರಧನ ಮಂಜೂರಾತಿಗೆ ಸಂಬಂಧಿಸಿದಂತೆ ಮಾತನಾಡಿ, 2021ರ ಡಿಸೆಂಬರ್ ಮಾಹೆಯಿಂದ ಪ್ರಸಕ್ತ ಮಾಹೆಯವರೆಗೆ ಪೊಲೀಸ್ ಇಲಾಖೆಯಿಂದ ನೀಡಲಾಗಿರುವ 51 ಜನ ಸಂತ್ರಸ್ತರಿಗೆ ರೂ. 70,98,003 ರೂ.ಗಳ ಪರಿಹಾರಧನವನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ ಸೇರಿದಂತೆ ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್‌ಗಳು, ಡಿವೈಎಸ್ಪಿಗಳು, ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಜಾಗೃತಿ ಸಮಿತಿ ಸದಸ್ಯರುಗಳು ಉಪಸ್ಥಿತರಿದ್ದರು…

ವರದಿ. ಮಂಜುನಾಥ್, ಎನ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;