ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆಗೆ: ಗ್ರಾಮಗಳ ಸಮೀಕ್ಷೆ ನಡೆಸಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ, : ಪ್ರತಿ ತಿಂಗಳ ಮೂರನೇ ಶನಿವಾರದಂದು ನಡೆಯಲಿರುವ “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆಗೆ” ಕಾರ್ಯಕ್ರಮವು ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಲು ಕಾರ್ಯಕ್ರಮ ನಡೆಯಲಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿನ ಮನೆಗಳ ಸಮೀಕ್ಷೆಯನ್ನು ಪೂರ್ವಭಾವಿಯಾಗಿ ನಡೆಸಿ, ಫಲಾನುಭವಿಗಳ ಮಾಹಿತಿ ಕಲೆ ಹಾಕಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಸೂಚಿಸಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆಗೆ ಕಾರ್ಯಕ್ರಮ”ದ ಪೂರ್ವಸಿದ್ಧತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಕಂದಾಯ ಇಲಾಖೆಯ ಮಹತ್ವಾಕಾಂಕ್ಷೆ ಕಾರ್ಯಕ್ರಮ ಇದಾಗಿದ್ದು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು ಕಾರ್ಯಕ್ರಮ ನಡೆಯಲಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಪ್ರತಿ ಮನೆಗೆ ಭೇಟಿ ನೀಡಿ, ಪೌತಿ ಖಾತೆ, ಹಕ್ಕುಪತ್ರ ವಿತರಣೆ, ಸಾಮಾಜಿಕ ಭದ್ರತಾ ಯೋಜನೆ ಮತ್ತು ಪಿಂಚಣಿ ಯೋಜನೆಗಳಾದ ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ವೇತನ, ಮನಸ್ವಿನಿ ಯೋಜನೆ, ಮೈತ್ರಿ ಯೋಜನೆ ಸೇರಿದಂತೆ ಇನ್ನಿತರೆ ಯೋಜನೆಗಳ ಫಲಾನುಭವಿಗಳ ಮಾಹಿತಿ ಸಂಗ್ರಹಿಸಿ, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲು ಕ್ರಮ ವಹಿಸಬೇಕು ಎಂದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ವತಿಯಿಂದ ನರೇಗಾ ಯೋಜನೆಯಡಿ ಜಾಬ್ ಕಾರ್ಡ್ ವಿತರಣೆ, ಎನ್ಆರ್ಎಲ್ಎಂ ಯೋಜನೆಯಡಿ ಸ್ತ್ರೀ-ಶಕ್ತಿ ಗುಂಪುಗಳಿಗೆ, ಸ್ವ-ಸಹಾಯ ಸಂಘಗಳಿಗೆ ಸಹಾಯಧನ ವಿತರಣೆ, ಇನ್ನಿತರ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಬೇಕೆಂದರು.
ಆರೋಗ್ಯ ಇಲಾಖೆಯು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆಗೆ ಕ್ರಮ ವಹಿಸಬೇಕು. ಕಾರ್ಯಕ್ರಮ ನಡೆಯುವ ದಿನದಂದು ಉಚಿತ ಆರೋಗ್ಯ ಶಿಬಿರ ಹಾಗೂ ರಕ್ತದಾನ ಶಿಬಿರ ಆಯೋಜಿಸಬೇಕು ಎಂದರಲ್ಲದೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಕಲ್ಯಾಣ ಇಲಾಖೆಯಡಿ ನೀಡಲಾಗುವ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ವಿತರಣೆಗೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಕೃಷಿ, ತೋಟಗಾರಿಕೆ ಹಾಗೂ ಪಶುಪಾಲನಾ ಇಲಾಖೆಯು ಜಂಟಿಯಾಗಿ ಗ್ರಾಮಗಳಲ್ಲಿ ಸಮೀಕ್ಷೆ ಕೈಗೊಂಡು, ಕೃಷಿ ಸಮ್ಮಾನ್, ಬೆಳೆ ವಿಮೆ ಸೇರಿದಂತೆ ಎಲ್ಲಾ ಯೋಜನೆಗಳ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ತಲುಪಿಸಬೇಕು ಎಂದು ಹೇಳಿದರು.
ಆರೋಗ್ಯ, ಕೃಷಿ, ತೋಟಗಾರಿಕೆ, ಪಶುಪಾಲನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಕೈಮಗ್ಗ ಮತ್ತು ಜವಳಿ ಸೇರಿದಂತೆ ವಿವಿಧ ಇಲಾಖೆಗಳ ಸವಲತ್ತುಗಳ ಮಾಹಿತಿ ನೀಡಲು ಮಳಿಗೆಗಳನ್ನು ವ್ಯವಸ್ಥಿತವಾಗಿ ತೆರೆಯಬೇಕೆಂದರು.
ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆಗೆ ಕಾರ್ಯಕ್ರಮ ನಡೆಯಲಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ ಹಾಗೂ ಪ್ರಾರಂಭಿಸಬೇಕಿರುವ ಕಾಮಗಾರಿಗಳ ಶಂಕುಸ್ಥಾಪನೆಗೆ ಪೂರ್ವ ಯೋಜಿತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದರಲ್ಲದೆ ಮನೆ ಬಾಗಿಲಿಗೆ ಸರ್ಕಾರಿ ಸೌಲಭ್ಯ ತಲುಪಿಸುವ ಈ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಹಕಾರದಿಂದ ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ. ನಾಗರಾಜ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು…

ವರದಿ.ಕಲಾವತಿ, ಎನ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
