ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧಾರ
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜೂ.21ರಂದು:ಅರ್ಥಪೂರ್ಣ ಆಚರಣೆಗೆ ನಿರ್ಧಾರ
: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಜೂ.21ರಂದು ಬಳ್ಳಾರಿ ಜಿಲ್ಲೆಯಲ್ಲಿ 3 ಐತಿಹಾಸಿಕ ಮತ್ತು ಪಾರಂಪರಿಕ ಸ್ಥಳಗಳಲ್ಲಿ ಯೋಗ ಕಾರ್ಯಕ್ರಮ ನಡೆಯಲಿದ್ದು,ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಜಿಪಂ ಸಿಇಒ ಜಿ.ಲಿಂಗಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಗಿದೆ.
ಜೂ.21ರಂದು ಬಳ್ಳಾರಿ ನಗರದ ಶ್ರೀ ಕನಕದುರ್ಗಮ್ಮ ದೇವಸ್ಥಾನ ಮತ್ತು ಕೋಟೆ ಮಲ್ಲೇಶ್ವರ ದೇವಸ್ಥಾನ ಆವರಣದಲ್ಲಿ ಹಾಗೂ ಕಂಪ್ಲಿಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲು ನಿರ್ಧರಿಸಲಾಗಿದ್ದು, ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಪಂ ಸಿಇಒ ಜಿ.ಲಿಂಗಮೂರ್ತಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜೂ.21ರಂದು ಬೆಳಗ್ಗೆ 6:15ಕ್ಕೆ ಯೋಗ ಕಾರ್ಯಕ್ರಮಗಳು ಆರಂಭವಾಗಲಿದ್ದು,6:45ರವರೆಗೆ ಯೋಗ ವೇದಿಕೆ ಕಾರ್ಯಕ್ರಮ ನಡೆಯಲಿದ್ದು,ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಚಾಲನೆ ನೀಡಲಿದ್ದಾರೆ. ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ,ಗ್ರಾಮೀಣ ಶಾಸಕ ಬಿ.ನಾಗೇಂದ್ರ,ಸಂಸದರಾದ ವೈ.ದೇವೇಂದ್ರಪ್ಪ ಸೇರಿದಂತೆ ಶಾಸಕರು,ಸಂಸದರು ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. 6:45ರ ನಂತರ ಯೋಗಾಸನ ಕಾರ್ಯಕ್ರಮ ಆರಂಭವಾಗಲಿದೆ ಎಂದರು.
ಬಳ್ಳಾರಿ ನಗರದಲ್ಲಿ ನಡೆಯಲಿರುವ ಎರಡು ಕಡೆಯೂ ತಲಾ ಕನಿಷ್ಠ 1 ಸಾವಿರ ಜನರು ಸೇರುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು; ಪತಂಜಲಿ ಯೋಗ ಕೇಂದ್ರ,ಆರ್ಟ್ ಆಫ್ ಲಿವಿಂಗ್ ಸೇರಿದಂತೆ ಯೋಗ ಕೇಂದ್ರಗಳು ಅಗತ್ಯವಾಗಿ ಸಹಕಾರ ನೀಡಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಾಸ್ಟೆಲ್ಗಳಲ್ಲಿರುವ ವಿದ್ಯಾರ್ಥಿಗಳು ಯೋಗಾಸನ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಕ್ರಮವಹಿಸಲು ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಸಮಾಜಕಲ್ಯಾಣ,ಪರಿಶಿಷ್ಟ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ,ಕ್ರೀಡಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಲಘುಉಪಹಾರ ಮತ್ತು ನೀರಿನ ವ್ಯವಸ್ಥೆ,ಯೋಗಾಸನ ಮಾಡಲು ಗ್ರೀನ್ ಮ್ಯಾಟ್ ವ್ಯವಸ್ಥೆ ಮತ್ತು ವೇದಿಕೆ ಹಾಗೂ ಧ್ವನಿವರ್ಧಕ ವ್ಯವಸ್ಥೆ ಹಾಗೂ ಆವರಣದೊಳಗೆ ಸಂಪೂರ್ಣ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಕೈಗೊಳ್ಳಬೇಕು ಎಂದರು. ಯೋಗಾಸನ ಮಾಡುವ ಪ್ರತಿಯೊಬ್ಬರಿಗೂ ಟೀ ಶರ್ಟ್ ಮತ್ತು ಕ್ಯಾಪ್ಗಳ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಈ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಹೇಳಿದ ಅವರು ಯೋಗದಲ್ಲಿ ಸಾಧನೆ ಮಾಡಿದ 5 ಜನ ಮಹನೀಯರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಗುವುದು ಎಂದರು.
ಯೋಗ ದಿನಾಚರಣೆ ಅಂಗವಾಗಿ ಯೋಗದ ಮಹತ್ವ ಸಾರುವ ಉದ್ದೇಶದಿಂದ ಜೂ.19 ಅಥವಾ 20ರಂದು ಬಳ್ಳಾರಿಯಲ್ಲಿ ಬೃಹತ್ ಯೋಗಜಾಥಾ ನಡೆಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಸುಜಾತಾ ಪಾಟೀಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಲ್.ಜನಾರ್ಧನ್,ಯೋಗ ಕೇಂದ್ರದ ಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು…

ವರದಿ.ವಿರೇಶ್. ಎಚ್. ಸಿರಿಗುಪ್ಪ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
