;

ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಂತರ್ ಇಲಾಖೆಯ ಸಮನ್ವಯ ಸಮಿತಿ ಸಭೆ….!!!!

ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಂತರ್ ಇಲಾಖೆಯ ಸಮನ್ವಯ ಸಮಿತಿ ಸಭೆ
ಕುಷ್ಠರೋಗ ಸೊಂಕಿನ ನಿರ್ಮೂಲನೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ:ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್
ಹೊಸಪೇಟೆ:ಆಶಾ ಕಾರ್ಯಕರ್ತೆಯರು ವ್ಯಾಲೆಂಟರಿಗಳು ತಂಡ ತಂಡಗಳಾಗಿ ಮನೆ-ಮನೆ ಭೇಟಿ ನೀಡುವ ಮೂಲಕ ಕುಷ್ಠರೋಗ ಶಂಕಿತ ಪ್ರಕರಣಗಳನ್ನು ಪತ್ತೆಹಚ್ಚಿ ಹಾಗೂ ದೃಢಪಟ್ಟ ಪ್ರಕರಣಗಳನ್ನು ಚಿಕಿತ್ಸೆಗೆ ಒಳಪಡಿಸುವುದರ ಮೂಲಕ ಸಮಾಜದಲ್ಲಿ ಸೋಂಕನ್ನು ನಿರ್ಮೂಲನೆ ಮಾಡುವುದಕ್ಕೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು ಹೇಳಿದರು.
ಶುಕ್ರವಾರದಂದು ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಂತರ್ ಇಲಾಖೆಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಜಯನಗರ ಜಿಲ್ಲೆಯಾದ್ಯಂತ ಕುಷ್ಟರೋಗ ಪತ್ತೆ ಹಚ್ಚುವ ಅಭಿಯಾನವು ಸೆ.12ರಿಂದ ಸೆ.29ರವರೆಗೆ ನಡೆಯಲಿದ್ದು, ಎಲ್ಲಾ ತಾಲೂಕು ಅಧಿಕಾರಿಗಳ ಜೊತೆಗೆ ಆಶಾ ಕಾರ್ಯಕರ್ತೆಯರು, ಸ್ವಯಂ ಸೇವಕರು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕುಷ್ಠರೋಗ ಪ್ರಕರಣ ಪತ್ತೆ ಹಚ್ಚುವ ಅಭಿಯಾನದಲ್ಲಿ ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಬೇಕು ಎಂದರು.
ಜಿಲ್ಲೆಯ ಎಲ್ಲಾ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಕಾರ್ಮಿಕ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಾರ್ಮಿಕರಿಗೆ ಕುಷ್ಠರೋಗ ತಪಾಸಣೆ ಮಾಡಲು ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ವಿಜಯನಗರ ಜಿಲ್ಲೆಯ ಎಲ್ಲಾ ಗ್ರಾಮ, ಪಟ್ಟಣಗಳಲ್ಲಿ ಕುಷ್ಠ ರೋಗ ಪತ್ತೆಹಚ್ಚುವ ಆಂದೋಲನದ ಬಗ್ಗೆ ತಮ್ಮ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆಯ ಆಡಳಿತದ ಮುಖಾಂತರ ಡಂಗೂರು ಸಾರಿಸುವುದು, ಕಸ ವಿಲೇವಾರಿ ವಾಹನಗಳಲ್ಲಿ ಮೈಕಿಂಗ್/ಜಿಂಗಲ್ಸ್ ಗಳ ಮೂಲಕ ಪ್ರಚಾರ ಮಾಡುವುದು ಸೇರಿದಂತೆ ಭಿತ್ತಿಚಿತ್ರಗಳನ್ನು ಗ್ರಾಮ ಪಂಚಾಯಿತಿ, ಕೃಷಿ ಪತ್ತಿನ ಸಹಕಾರ ಸಂಘ, ಇಂದಿರಾ ಕ್ಯಾಂಟಿನ್, ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಸಾರ್ವಜನಿಕ ಸೇರುವ ಸ್ಥಳಗಳಲ್ಲಿ ಅಂಟಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿದರು.
ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿಗಳಾದ ಡಾ.ಭಾಸ್ಕರ್ ಅವರು ಮಾತನಾಡಿ ನಮ್ಮ ಜಿಲ್ಲೆಯಲ್ಲಿ ಸದರಿ ಅಭಿಯಾನದಲ್ಲಿ 3 ಲಕ್ಷ ಮನೆಗಳಿಂದ 1504114 ಜನಸಂಖ್ಯೆಯನ್ನು ತಪಾಸಣೆ ಮಾಡಲು 1104 ತಂಡಗಳನ್ನು ರಚಿಸಲಾಗಿದ್ದು, ಇದರಲ್ಲಿ 220 ಮೇಲ್ವಿಚಾರಕರು ಹಾಗೂ 1990 ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರನ್ನು ಒಳಗೊಂಡಂತೆ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಹೊಸದಾಗಿ ಕುಷ್ಠರೋಗ ಪ್ರಕರಣಗಳಿಗೆ ಉಂಟಾಗುವ ಅಂಗವಿಕಲತೆಯನ್ನು 10 ಲಕ್ಷ ಜನಸಂಖ್ಯೆಗೆ ಒಂದಕ್ಕಿಂತ ಕಡಿಮೆ ಮಾಡಲು ಮತ್ತು ಸುಪ್ತ ಕುಷ್ಠರೋಗ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪತ್ತೆ ಹಚ್ಚಲು ಈ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸಲೀಂ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಭಾಸ್ಕರ್, ಆರ್.ಸಿ.ಹೆಚ್.ಒ ಡಾ.ಜಂಭಯ್ಯ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕಮಾಲ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶಂಕರ್‍ನಾಯ್ಕ್ ಸೇರಿದಂತೆ ಎಲ್ಲಾ ತಾಲೂಕು ಆರೋಗ್ಯ ಅಧಿಕಾರಿಗಳು, ತಾಲ್ಲೂಕು ಆರೋಗ್ಯ ಶಿಕ್ಷಣ ಅಧಿಕಾರಿಗಳು ಹಾಗೂ ಅಂತರ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಇದ್ದರು…

ವರದಿ. ಗಣೇಶ್. ಕೆ. ಹೊಸಪೇಟೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;