ಪ್ರಾಥಮಿಕ ಹಂತದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ವಹಿಸಿ: ಜಿಲ್ಲಾಧಿಕಾರಿ ಆರ್.ಲತಾ…!!!

ಪ್ರಾಥಮಿಕ ಹಂತದಲ್ಲಿಯೇ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ವಹಿಸಿ: ಜಿಲ್ಲಾಧಿಕಾರಿ ಆರ್.ಲತಾ

ಬೆಂಗಳೂರು ಗ್ರಾಮಾಂತರ : ಜನಸಾಮಾನ್ಯರ ಸಮಸ್ಯೆಗಳನ್ನು ಕೂಲಂಕುಷವಾಗಿ ಆಲಿಸಿ, ಪ್ರಾಥಮಿಕ ಹಂತದಲ್ಲಿಯೇ ಬಗೆಹರಿಸಲು ಕ್ರಮ ವಹಿಸುವ ಮೂಲಕ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ 4ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲ್ಲೂಕುಗಳಲ್ಲಿ ನಿಗದಿತ ಸಮಯಕ್ಕೆ ನಿಯಮಿತವಾಗಿ ಜಾಗೃತಿ ಹಾಗೂ ಉಸ್ತುವಾರಿ ಸಮಿತಿಯ ಸಭೆಗಳನ್ನು ನಡೆಸಬೇಕು ಎಂದರಲ್ಲದೆ, ಸಭೆಗಳನ್ನು ನಡೆಸುವುದರಿಂದ ನಿವೇಶನ, ರಸ್ತೆ, ಸ್ಮಶಾನ ಭೂಮಿ ಮಂಜೂರು, ದೌರ್ಜನ್ಯ ಪ್ರಕರಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ತಳಮಟ್ಟದಲ್ಲಿಯೇ ಪರಿಹರಿಸಬಹುದಾಗಿದೆ. ಸಮಸ್ಯೆಗಳಿರುವ ಸ್ಥಳಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯೊಂದಿಗೆ ಕ್ಷೇತ್ರ ಭೇಟಿ ಮಾಡಬೇಕು, ಸ್ಥಳೀಯ ಮಟ್ಟದಲ್ಲಿ ಬಗೆಹರಿಸಲಾಗದ ಸಮಸ್ಯೆಗಳನ್ನು ಜಿಲ್ಲಾ ಹಂತದಲ್ಲಿ ಪ್ರಸ್ತಾಪಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆ ಕಾರ್ಯಕ್ರಮಗಳ ಅಡಿಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಸೌಲಭ್ಯಗಳನ್ನು ತಲುಪಿಸಬೇಕು ಎಂದು ಹೇಳಿದರಲ್ಲದೆ ಫಲಾನುಭವಿಗಳಿಗೆ ವಿವಿಧ ಯೋಜನೆಗಳನ್ನು ತಲುಪಿಸುವ ಮುನ್ನ, ಫಲಾನುಭವಿಗಳ ಆಯ್ಕೆಗೆ ನಿಗದಿತ ಮಾನದಂಡಗಳನ್ನು ಅನುಸರಿಸಬೇಕು ಎಂದರು.
ಸ್ಮಶಾನ ಭೂಮಿ ಮಂಜೂರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರ ಜಮೀನುಗಳಿಗೆ ರಸ್ತೆ ಹಾಗೂ ಕಾಲೋನಿಗಳ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದರಲ್ಲದೆ ವಸತಿರಹಿತರಿಗೆ ವಿವಿಧ ವಸತಿ ಯೋಜನೆಗಳಡಿ ಮನೆ ಅಥವಾ ಆಶ್ರಯ ನಿವೇಶನ ಹಕ್ಕುಪತ್ರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಹೊಸಕೋಟೆ ತಾಲ್ಲೂಕಿನಲ್ಲಿ ಬುದ್ಧವಿಹಾರ ನಿರ್ಮಾಣ ಮಾಡಲು ವಾಗಟ ಗ್ರಾಮದ ಸರ್ಕಾರಿ ಗೋಮಾಳದ ಜಮೀನಿನಲ್ಲಿ ಐದು ಎಕರೆ ಜಮೀನು ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.


ಹಕ್ಕುಪತ್ರ ವಿತರಣೆ ಬಾಕಿ ಇರುವ ಫಲಾನುಭವಿಗಳಿಗೆ ನಿಯಮಾನುಸಾರ ಹಕ್ಕುಪತ್ರಗಳನ್ನು ವಿತರಿಸಲು ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರಲ್ಲದೆ ಸಾರ್ವಜನಿಕರು ಭೇಟಿ ನೀಡುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಜಿಲ್ಲೆಯ ಎಲ್ಲಾ ತಹಶಿಲ್ದಾರ್ ಕಚೇರಿಗಳಲ್ಲಿ ಶೌಚಾಲಯ ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸುವಂತೆ ಸೂಚಿಸಿದರು.
2022ರ ಜನವರಿ ಮಾಹೆಯಿಂದ ನವೆಂಬರ್ ಮಾಹೆಯವರೆಗೆ 43 ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದು 16 ಪ್ರಕರಣಗಳ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. 41 ಜನ ಸಂತ್ರಸ್ತರಿಗೆ ರೂ. 60.92 ಲಕ್ಷ ರೂ.ಗಳ ಪರಿಹಾರಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಸಭೆಯಲ್ಲಿ ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಅವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ದೌರ್ಜನ್ಯ ಪ್ರಕರಣಗಳು ನಡೆದ 24 ಗಂಟೆಗಳಲ್ಲಿ ಪ್ರಕರಣ ದಾಖಲು ಮಾಡುವುದರೊಂದಿಗೆ, ಪ್ರಕರಣ ನಡೆದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಕ್ರಮ ಕೈಗೊಂಡು ಪರಿಹಾರ ಒದಗಿಸುವ ಮೂಲಕ ಶೀಘ್ರವಾಗಿ ಪ್ರಕರಣಗಳನ್ನು ಇತ್ಯರ್ಥಗೊಳಿಸಬೇಕು ಎಂದು ಹೇಳಿದರು.
ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿರುದ್ಧದ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ನ್ಯಾಯ ಒದಗಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ನಾಗರಾಜ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಪ್ರೇಮ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು.ಎನ್, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಕೇಶ್, ಸೇರಿದಂತೆ ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರುಗಳು, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ಡಿವೈಎಸ್ಪಿ‌ಗಳು, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕರುಗಳು, ಉಪಸ್ಥಿತರಿದ್ದರು…

ವರದಿ. ಕಲಾವತಿ. ಎನ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend