;

ಶಸ್ತ್ರ ಪರವಾನಗಿದಾರರು ತಮ್ಮ ಬಳಿ ಇರುವ ಶಸ್ತ್ರಾಸ್ತ್ರಗಳನ್ನು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಲು ಜಿಲ್ಲಾಧಿಕಾರಿ ಆರ್.ಲತಾ ಆದೇಶ…!!!

ಶಸ್ತ್ರ ಪರವಾನಗಿದಾರರು ತಮ್ಮ ಬಳಿ ಇರುವ ಶಸ್ತ್ರಾಸ್ತ್ರಗಳನ್ನು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಸಂಬಂಧಿಸಿದ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಲು ಜಿಲ್ಲಾಧಿಕಾರಿ ಆರ್.ಲತಾ ಆದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆ,: ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಶಸ್ತ್ರ ಪರವಾನಗಿ ಹೊಂದಿರುವ ಶಸ್ತ್ರ ಪರವಾನಗಿದಾರರು ತಮ್ಮ ಬಳಿ ಇರುವ ಶಸ್ತ್ರಾಸ್ತ್ರಗಳನ್ನು ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇಡಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಆದೇಶಿಸಿದ್ದಾರೆ.
ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಭಾರತ ಚುನಾವಣಾ ಆಯೋಗವು 2023ರ ಮಾರ್ಚ್ 29 ರಂದು ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾದರಿ ನೀತಿ ಸಂಹಿತೆಯು ಮಾರ್ಚ್ 29 ರಿಂದ ಮೇ 15 ರವರೆಗೆ ಜಾರಿಯಲ್ಲಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಾದ 178-ಹೊಸಕೋಟೆ ವಿಧಾನಸಭಾ ಕ್ಷೇತ್ರ, 179-ದೇವನಹಳ್ಳಿ ವಿಧಾನಸಭಾ ಕ್ಷೇತ್ರ, 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಮತ್ತು 181-ನೆಲಮಂಗಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಶಸ್ತ್ರ ಪರವಾನಗಿ ಹೊಂದಿರುವ ಶಸ್ತ್ರ ಪರವಾನಗಿದಾರರು ತಮ್ಮ ಬಳಿ ಇರುವ ಶಸ್ತ್ರಾಸ್ತ್ರಗಳನ್ನು ಮುಂಜಾಗ್ರತಾ ಕ್ರಮವಾಗಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಠೇವಣಿ ಇರಿಸಿಕೊಳ್ಳುವ ಅವಶ್ಯಕತೆ ಇರುವುದರಿಂದ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹಾಗೂ ಶಸ್ತ್ರಾಸ್ತ್ರಗಳ ಅಧಿನಿಯಮ 1959ರ ಕಲಂ 24 ರನ್ವಯ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ, ಚುನಾವಣಾ ಸಂಧರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಸಾರ್ವಜನಿಕರು ಅಧಿಕೃತ ಪರವಾನಗಿ ಹೊಂದಿರುವ ಆಯುಧಗಳು, ಮದ್ದು-ಗುಂಡುಗಳು, ಬೆಂಕಿ ಉಗುಳುವ (Fire Arms), ಶಸ್ತ್ರಾಸ್ತ್ರಗಳು ಹಾಗೂ ಮಾರಕಾಸ್ತ್ರಗಳನ್ನು ಹೊಂದಿರುವ ಶಸ್ತ್ರ ಪರವಾನಗಿದಾರರು ತಮ್ಮ ಬಳಿ ಇರುವ ಶಸ್ತ್ರಾಸ್ತ್ರಗಳನ್ನು, ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಸಂಬಂಧಪಟ್ಟ ಪೊಲೀಸ್ ಠಾಣೆಗಳಲ್ಲಿ ಠೇವಣಿ ಇರಿಸಿಕೊಳ್ಳಲು ಎಲ್ಲಾ ಪೊಲೀಸ್ ಠಾಣಾಧಿಕಾರಿಗಳಿಗೆ ಈ ಕೂಡಲೇ ಸೂಚನೆ ನೀಡಲು ಹಾಗೂ ತಮ್ಮ ವ್ಯಾಪ್ತಿಯಲ್ಲಿ ಶಸ್ತ್ರಾಸ್ತ್ರಗಳನ್ನು ಹೊಂದಿರುವ ಎಲ್ಲಾ ಶಸ್ತ್ರ ಪರವಾನಗಿದಾರರಿಂದ ಆಯುಧಗಳನ್ನು ಪಡೆದು ಠಾಣೆಯಲ್ಲಿ ಠೇವಣಿ ಇರಿಸಿಕೊಂಡು ಸೂಕ್ತ ಸ್ವೀಕೃತಿ ನೀಡಿ ಚುನಾವಣೆ ಪ್ರಕ್ರಿಯೆ ಮುಗಿದ ನಂತರ ಶಸ್ತ್ರ ಪರವಾನಗಿದಾರರ ಪರವಾನಗಿ ಪುಸ್ತಕವನ್ನು ಪರಿಶೀಲಿಸಿ ಶಸ್ತ್ರ ಪರವಾನಗಿ ನವೀಕರಣ ಗೊಂಡಿರುವ ಬಗ್ಗೆ ಖಚಿತ ಪಡಿಸಿಕೊಂಡ ನಂತರವಷ್ಟೇ ಪರವಾನಗಿದಾರರಿಗೆ ಶಸ್ತ್ರಾಸ್ತ್ರಗಳನ್ನು ಹಿಂದಿರುಗಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಎಲ್ಲಾ ಪೊಲೀಸ್ ಠಾಣಾಧಿಕಾರಿಗಳಿಗೆ ನಿರ್ದೇಶಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ ರವರಿಗೆ ಆದೇಶಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬ್ಯಾಂಕ್, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಅಧೀನದಲ್ಲಿನ ಸಂಸ್ಥೆಗಳಲ್ಲಿ ಭದ್ರತೆಗಾಗಿ ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಗಳಿಗೆ ಮಾತ್ರ ಈ ಮೇಲ್ಕಂಡ ಆದೇಶವು ಅನ್ವಯಿಸುವುದಿಲ್ಲ. ಉಳಿದಂತೆ ಭದ್ರತೆಗಾಗಿ ಪರವಾನಗಿ ಇಲ್ಲದ ಬ್ಯಾಂಕ್, ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಅಧೀನದಲ್ಲಿನ ಸಂಸ್ಥೆಗಳು ಕಡ್ಡಾಯವಾಗಿ ತಮ್ಮ ಶಸ್ತ್ರಾಸ್ತ್ರಗಳನ್ನು ಪೊಲೀಸ್ ಠಾಣೆಗಳಲ್ಲಿ ಠೇವಣಿ ಇರಿಸಿಕೊಳ್ಳಲು ತಿಳಿಸಿದೆ.
ಧಾರ್ಮಿಕ ಸಂಸ್ಥೆಗಳು, ಸರ್ಕಾರಿ, ಅರೆ ಸರ್ಕಾರಿ ಮತ್ತು ಸರ್ಕಾರೇತರ ಖಾಸಗಿ ಸಂಸ್ಥೆಗಳಲ್ಲಿ ಭದ್ರತೆಗಾಗಿ ಆಯುಧಗಳನ್ನು ಹೊಂದಿರುವವರು ಹಾಗೂ ವೈಯುಕ್ತಿಕವಾಗಿ ಜೀವ ಬೆದರಿಕೆ ಹೊಂದಿರುವವರು ಆಯುಧಗಳನ್ನು ತಮ್ಮಲ್ಲಿಯೇ ಇಟ್ಟುಕೊಳ್ಳುವ ಅನಿವಾರ್ಯತೆಗಳು ಇದ್ದಲ್ಲಿ ಇಂತಹ ಶಸ್ತ್ರ ಪರವಾನಿಗೆದಾರರು ತಮ್ಮ ವ್ಯಾಪ್ತಿ ಪ್ರದೇಶದ ಪೊಲೀಸ್ ಠಾಣೆಗಳಲ್ಲಿ ಅರ್ಜಿ ಸಲ್ಲಿಸತಕ್ಕದ್ದು, ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಗಳನ್ನು ಎಲ್ಲಾ ಪೊಲೀಸ್ ಠಾಣಾಧಿಕಾರಿಗಳು ತಮ್ಮ ಮೇಲಾಧಿಕಾರಿಗಳಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಗೆ ಸ್ಪಷ್ಟ ಅಭಿಪ್ರಾಯದೊಂದಿಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು. ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಗಳನ್ನು ಜಿಲ್ಲಾ ಸ್ಕ್ರೀನಿಂಗ್ ಕಮಿಟಿ ಸದಸ್ಯರಾದ ಜಿಲ್ಲಾ ಪೊಲೀಸ್ ಅಧೀಕ್ಷಕರು ಸದರಿ ಅರ್ಜಿಗಳನ್ನು ಕಮಿಟಿ ಮುಂದೆ ಮಂಡಿಸಿ ಅರ್ಜಿಗಳ ಅರ್ಹತೆಯ ಮೇರೆಗೆ ಪರಿಶೀಲಿಸಿ ಸಮಿತಿ ನಿರ್ಣಯದಂತೆ ವಿನಾಯಿತಿ ನೀಡುವ ಬಗ್ಗೆ ಕ್ರಮವಹಿಸಬೇಕು.
ಯಾವುದೇ ಪರವಾನಗಿದಾರರು ಚುನಾವಣಾ ಮಾದರಿ ನೀತಿ ಸಂಹಿತೆಯ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳನ್ನು ಸಂಬಂಧಪಟ್ಟ ಪೊಲೀಸ್‌ ಠಾಣೆಗೆ ಠೇವಣಿ ಇರಿಸದೆ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಹಾಗೂ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಅನ್ವಯವಾಗಬಹುದಾದ ಎಲ್ಲಾ ಕಾಯ್ದೆಗಳನ್ವಯ ಕಾನೂನು ರೀತ್ಯಾ ಕ್ರಮಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಆದೇಶಿಸಿದ್ದಾರೆ. ಈ ಆದೇಶವು ಮಾದರಿ ನೀತಿ ಸಂಹಿತೆ ಅವಧಿಯಲ್ಲಿ ಮಾತ್ರ ಜಾರಿಯಲ್ಲಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…

ವರದಿ. ಕಲಾವತಿ, ಎನ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *