;

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶ ಪಟ್ಟಿಗೆ ಸೇರಿಸಿ: ಟಿ. ವೀರಭದ್ರಪ್ಪ…!!!

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶ ಪಟ್ಟಿಗೆ ಸೇರಿಸಿ: ಟಿ. ವೀರಭದ್ರಪ್ಪ

*ಗೋಶಾಲೆ ಆರಂಭಿಸಿ ಜಾನುವಾರುಗಳಿಗೆ ಮೇವು–ನೀರು ಒದಗಿಸಲು ಆಗ್ರಹ; ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಬಗ್ಗೆ ಎಚ್ಚರಿಕೆ.*

*ನಾಯಕನಹಟ್ಟಿ:* ರಾಜ್ಯದಲ್ಲಿಯೇ ಅತೀ ಕಡಿಮೆ ಮಳೆ ಬೀಳುವ ಪ್ರದೇಶ ಎಂಬ ಹಣೆಪಟ್ಟಿ ಹೊಂದಿರುವ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರವನ್ನು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವುದು ಶೋಚನೀಯ ಸಂಗತಿ ಎಂದು ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ *ಟಿ. ವೀರಭದ್ರಪ್ಪ* ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಸರ್ಕಾರ ಘೋಷಿಸಿದೆ. ಆದರೆ ಮೊಳಕಾಲ್ಮೂರು ತಾಲ್ಲೂಕನ್ನು ಮಾತ್ರ ಏಕೆ ಕೈಬಿಡಲಾಗಿದೆ ಎಂಬುದು ಅರ್ಥವಾಗುತ್ತಿಲ್ಲ. ಕ್ಷೇತ್ರದಲ್ಲಿ ರೈತರು ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು.

ಮೊಳಕಾಲ್ಮೂರು ಶಾಸಕ *ಎನ್.ವೈ. ಗೋಪಾಲಕೃಷ್ಣ* ಅವರಿಗೆ ಕ್ಷೇತ್ರದ ಜನರ ಬಗ್ಗೆ ನಿಜವಾದ ಕಾಳಜಿ ಇದ್ದಿದ್ದರೆ, ಮೊಳಕಾಲ್ಮೂರು ಕ್ಷೇತ್ರ ಬರಪೀಡಿತ ಪಟ್ಟಿಯಲ್ಲಿ ಇಲ್ಲ ಎಂಬುದು ತಿಳಿದ ತಕ್ಷಣ ವಿಧಾನಸೌಧದ ಮುಂದೆ ಹೋರಾಟ ನಡೆಸಬೇಕಿತ್ತು. ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಟೀಕಿಸಿದರು.

ಕ್ಷೇತ್ರದ ವಾಸ್ತವ ಪರಿಸ್ಥಿತಿಯನ್ನು ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಬೇಕಿತ್ತು. ಜನಪ್ರತಿನಿಧಿಗಳಿಗೆ ರೈತರ ಬಗ್ಗೆ ಕಾಳಜಿ ಇಲ್ಲದಿದ್ದರೂ ಅಧಿಕಾರಿಗಳಾದರೂ ಇಲ್ಲಿನ ಪರಿಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರಬೇಕಿತ್ತು. ಜಿಲ್ಲಾ ಉಸ್ತುವಾರಿ ಸಚಿವರೂ ಮೊಳಕಾಲ್ಮೂರು ಕ್ಷೇತ್ರವನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.

*ಜಾನುವಾರುಗಳಿಗೆ ಗೋಶಾಲೆ ಅಗತ್ಯ*

ಮೊಳಕಾಲ್ಮೂರು ಕ್ಷೇತ್ರದಲ್ಲಿ ದೇವರ ಎತ್ತುಗಳು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರುಗಳಿದ್ದು, ಅವುಗಳ ರಕ್ಷಣೆಗಾಗಿ ಸರ್ಕಾರ ಕೂಡಲೇ ಗೋಶಾಲೆಗಳನ್ನು ಆರಂಭಿಸಬೇಕು. ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ಮತ್ತು ನೀರು ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯ ಅಧಿಕಾರಿಗಳು ಕ್ಷೇತ್ರದಲ್ಲಿ ಸ್ಥಳ ಪರಿಶೀಲನೆ ನಡೆಸಿ, ಬರ ಪರಿಸ್ಥಿತಿಯ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿ ಗೋಶಾಲೆಗಳನ್ನು ತೆರೆಯಲು ಕ್ರಮ ಕೈಗೊಳ್ಳಬೇಕು. ಸರ್ಕಾರದಿಂದ ಅನುದಾನ ದೊರೆಯದಿದ್ದರೆ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಗೋಶಾಲೆಗಳನ್ನು ಆರಂಭಿಸುವ ಕೆಲಸಕ್ಕೂ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿ ಗೋಶಾಲೆಗಳನ್ನು ಆರಂಭಿಸಿದರೆ, ಅವುಗಳನ್ನು ಕಾಂಗ್ರೆಸ್ ಶಾಸಕರಿಂದಲೇ ಉದ್ಘಾಟನೆ ಮಾಡಿಸಲಾಗುವುದು ಎಂದು ವ್ಯಂಗ್ಯವಾಡಿದರು.

*ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಆತಂಕ*

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಅಂತರ್ಜಲ ಮಟ್ಟ ನಿರಂತರವಾಗಿ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕ್ಷೇತ್ರದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ನಿಜವಾದ ಬದಲಾವಣೆ ಹಾಗೂ ಕ್ರಾಂತಿ ಆಗಬೇಕಾದರೆ ಯುವಕರು ನಮ್ಮೊಂದಿಗೆ ಕೈಜೋಡಿಸಬೇಕು. ಯುವಶಕ್ತಿಯ ಮೂಲಕ ಕ್ಷೇತ್ರದ ಸಮಸ್ಯೆಗಳ ವಿರುದ್ಧ ಹೋರಾಟ ರೂಪಿಸಲಾಗುವುದು ಎಂದು ಟಿ. ವೀರಭದ್ರಪ್ಪ ಹೇಳಿದರು.

ಈ ಸಂದರ್ಭದಲ್ಲಿ ಮೊಳಕಾಲ್ಮೂರು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಿ.ಬಿ. ಕರಿಬಸಪ್ಪ ಚೌಳಕೆರೆ, ನಾಯಕನಹಟ್ಟಿ ಜೆಡಿಎಸ್ ಹೋಬಳಿ ಅಧ್ಯಕ್ಷ ಪೂಜಾರಿ ತಿಪ್ಪೇಸ್ವಾಮಿ, ತಾಲ್ಲೂಕು ಕಾರ್ಯಾಧ್ಯಕ್ಷ ಹೆಚ್.ವಿ. ನಾಗರಾಜ್ ಹನುಮಂತನಹಳ್ಳಿ, ಜೆಡಿಎಸ್ ಹಿರಿಯ ಮುಖಂಡ ಗೋವಿಂದಪ್ಪ, ಕೆ.ಪಿ. ಬೋರಣ್ಣ ಜಾಗನೂರಹಟ್ಟಿ, ರೈತ ಮುಖಂಡ ಬಿ. ಕೃಷ್ಣಪ್ಪ ಜೋಗಿಹಟ್ಟಿ, ಶಳ್ಳೆ ಗೌಡ ಮಲ್ಲೂರಹಳ್ಳಿ, ಮಂಜಣ್ಣ ಕಾವಲು ಬಸವೇಶ್ವರನಗರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;