ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ ಹಾಗೂ ಹಿರಿಯೂರು ಸಾರ್ವಜನಿಕ ಆಸ್ಪತ್ರೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಭೇಟಿ, ಕೋವಿಡ್-19 ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ
ಕೋವಿಡ್ ಸೋಂಕಿತರಿಗೆ ಆಕ್ಸಿಜನ್, ಬೆಡ್, ಔಷಧಿ ಕೊರತೆಯಾಗದಂತೆ ನಿಗಾವಹಿಸಿ
ಚಿತ್ರದುರ್ಗಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಕ್ಸಿಜನ್, ಬೆಡ್, ರೆಮ್ಡೆಸಿವಿರ್ ಚುಚ್ಚುಮದ್ದು, ಔಷಧಿಗಳು ಯಾವುದೇ ರೀತಿಯಲ್ಲಿ ಕೊರತೆಯಾಗದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮವಹಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ ಹಾಗೂ ಹಿರಿಯೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಿಗೆ ಶನಿವಾರ ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಕೋವಿಡ್-19 ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಜಿಲ್ಲೆಯಲ್ಲಿ ಆಕ್ಸಿಜನ್ ಸಮಸ್ಯೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಲಾಗುತ್ತಿದೆ. ಆಕ್ಸಿಜನ್ ಸಮಸ್ಯೆಯಾಗದ ರೀತಿಯಲ್ಲಿ ಸರಿಪಡಿಸುವ ಕೆಲಸ ಮಾಡಲಾಗುತ್ತಿದೆ. ಈಗಾಗಲೇ ಜಿಲ್ಲೆಯ ಶಾಸಕರೊಟ್ಟಿಗೆ ಮುಖ್ಯಮಂತ್ರಿಗಳ ಬಳಿ ಚರ್ಚಿಸಿದ್ದು, ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ರೆಮ್ಡಿಸಿವಿರ್ ಚುಚ್ಚುಮದ್ದು ಹಾಗೂ ವ್ಯಾಕ್ಸಿನ್ಗಳು ಕೊರತೆಯಾಗದಂತೆ ಚರ್ಚಿಸಿ ಕ್ರಮವಹಿಸಲಾಗಿದೆ. ಯಾವುದೇ ರೀತಿಯಿಂದಲೂ ಜನರ ಜೀವಕ್ಕೆ ತೊಂದರೆಯಾಗದಂತೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ಹಾಗೆಯೇ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಟೆಸ್ಟ್ ಪ್ರಮಾಣ ಹೆಚ್ಚಿಸಿ: ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಹಳ್ಳಿಗಳಲ್ಲಿ ಕೋವಿಡ್ ಪರೀಕ್ಷೆ ಪ್ರಮಾಣ ಹೆಚ್ಚಳ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಟೆಸ್ಟ್ ಪ್ರಮಾಣ ಹೆಚ್ಚಿಸಿ, ಗ್ರಾಮೀಣ ಪ್ರದೇಶದಲ್ಲಿಯೇ ಚಿಕಿತ್ಸೆ ಕೊಡಿಸುವ ವ್ಯವಸ್ಥೆ ಮಾಡಬೇಕು. ಸೋಂಕಿತರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಒದಗಿಸದರೆ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಸೋಂಕಿತರು ಅಲೆದಾಡುವುದು ತಪ್ಪಲಿದೆ. ಜೊತೆಗೆ ಸೋಂಕಿನ ತೀವ್ರತೆಯ ಪ್ರಮಾಣವೂ ತಗ್ಗಲಿದೆ ಎಂದು ಹೇಳಿದರು.ಯಾವುದೇ ಕಾರಣಕ್ಕೂ ಆಕ್ಸಿಜನ್ ಕೊರತೆಯಿಂದಾಗಿ ಸೋಂಕಿತರು ಸಾವಿಗೀಡಾಗಬಾರದು. ಆಕ್ಸಿಜನ್ ಹಾಗೂ ರೆಮ್ಡಿಸಿವಿರ್ ಚುಚ್ಚುಮದ್ದು ಕೊರತೆಯಾಗದಂತೆ ಆಯಾ ತಾಲ್ಲೂಕಿನ ತಹಶೀಲ್ದಾರ್ ಹಾಗೂ ನೋಡಲ್ ಅಧಿಕಾರಿಗಳು ನೋಡಿಕೊಳ್ಳಬೇಕು. ಆಕ್ಸಿಜನ್ ಹಾಗೂ ರೆಮ್ಡಿಸಿವಿರ್ ಕೊರತೆಯಾದರೆ ಜಿಲ್ಲಾಧಿಕಾರಿ ಹಾಗೂ ಸ್ಥಳೀಯ ಶಾಸಕರ ಗಮನಕ್ಕೆ ತಂದರೆ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ ಅವರು, ನಗರ ಪ್ರದೇಶ ಮಾತ್ರವಲ್ಲದೇ ಗ್ರಾಮೀಣ ಪ್ರದೇಶಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಿ ಪ್ರತಿ ಹಳ್ಳಿಗಳನ್ನು ಸ್ಯಾನಿಟೈಸ್ ಮಾಡಲು ತಾಕೀತು ಮಾಡಿದರು.
ಕೋವಿಡ್-19 ಪ್ರಕರಣಗಳಿಗೆ ನಡೆಸುವ ಹೆಚ್.ಆರ್.ಸಿ.ಟಿ. ಹಾಗೂ ಡಿಜಿಟಲ್ ಎಕ್ಸರೇಗಳಿಗೆ ಸರ್ಕಾರದ ನಿಗಧಿಪಡಿಸಿರುವ ದರ ಮೀರಿ ಕೆಲವು ಖಾಸಗಿ ಪ್ರಯೋಗಾಲಯಗಳು ಸಿಟಿ ಸ್ಕ್ಯಾನ್ಗಾಗಿ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಇದರಿಂದ ಕೋವಿಡ್-19 ರೋಗಿಗಳಿಗೆ ಅನಾವಶ್ಯಕವಾಗಿ ಆರ್ಥಿಕ ಹೊರೆಯಾಗುತ್ತಿದೆ. ಸಿಟಿ ಸ್ಕ್ಯಾನ್ಗೆ ಸರ್ಕಾರ ನಿಗಧಿಪಡಿಸಿರುವ ದರಕ್ಕಿಂತ ಹೆಚ್ಚುವರಿ ಹಣ ಪಡೆಯುವ ಖಾಸಗಿ ಪ್ರಯೋಗಾಲಯಗಳ ಲೈಸನ್ಸ್ ರದ್ದು ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.
ಕೋವಿಡ್ ಸಂಕಷ್ಟದ ಸಂದರ್ಭದಲ್ಲೂ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು ಕಾರ್ಯನಿರ್ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹೊಳಲ್ಕೆರೆ ಶಾಸಕರು ಹಾಗೂ ಕೆಎಸ್ಆರ್ಟಿಸಿ ನಿಗಮದ ಅಧ್ಯಕ್ಷರಾದ ಎಂ.ಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಫಾಲಾಕ್ಷ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ. ಶಶಿಕುಮಾರ್ ಚಳ್ಳಕೆರೆ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
